ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳದ ಪ್ರಕರಣಗಳಲ್ಲಿ ಜೈಲು ಸೇರಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಒಟ್ಟು ನಾಲ್ಕು ಕೇಸ್ಗಳ ಪೈಕಿ ಒಂದು ಕೇಸ್ನಲ್ಲಿ ಇಂದು ತೀರ್ಪು ಪ್ರಕಟವಾಗಿದೆ. ಅತ್ಯಾಚಾರ ಕೇಸ್ನಲ್ಲಿ ಅವರು ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಅಲ್ಲದೆ ನಾಳೆ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಹೇಳಿದೆ.
ಕಳೆದ 14 ತಿಂಗಳಿಂದ ಪ್ರಜ್ವಲ್ ರೇವಣ್ಣ ಜೈಲಿನಲ್ಲೇ ಇದ್ದು, ಹಲವು ಬಾರಿ ಜಾಮೀನು ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಬೇಲ್ ಸಿಗಲಿಲ್ಲ. ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಮಹತ್ವದ ತೀರ್ಪು ಪ್ರಕಟವಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಕೆಲಸದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಬಂದಿಸಲಾಗಿತ್ತು. ಈ ಕೇಸ್ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಆದೇಶವನ್ನು ಕಾಯ್ದಿರಿಸಿದ್ದರು.
ಕಳೆದ ಲೋಕಸಭೆ ಚುನಾವಣೆಗೂ ಮುನ್ನ ಹಾಸನ ಕ್ಷೇತ್ರದ ಜೆಡಿಎಸ್ ಮಾಜಿ ಸಂಸದರಾಗಿದ್ದ ಪ್ರಜ್ವಲ್ ರೇವಣ್ಣ ಅವರ ಮೇಲೆ ಗಂಭೀರ ಆರೋಪ ಕೇಳಿಬಂದಿತ್ತು. ಪ್ರಜ್ವಲ್ ಹಲವು ಮಹಿಳೆಯರನ್ನ ಅತ್ಯಾಚಾರ ಮಾಡಿದ್ದು, ಭಯಾನಕವಾಗಿ ಲೈಂಗಿಕ ಕಿರುಕುಳ ನೀಡಿ, ಕಿರಿಯ ವಯಸ್ಸಿನ ಮಹಿಳೆಯರಿಂದಿಡಿದು ಹಿರಿಯ ವಯಸ್ಸಿನವರನ್ನೂ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದರು ಎನ್ನಲಾದ ನೂರಾರು ವಿಡಿಯೋಗಳ ಪೆನ್ಡ್ರೈವ್ ಹಾಸನದಾದ್ಯಂತ ಹಂಚಿಕೆಯಾಗಿತ್ತು. ಇದು ಇಡೀ ದೇಶದಾದ್ಯಂತ ಸಂಚಲನವನ್ನು ಸೃಷ್ಟಿಸಿತ್ತು.
ನಂತರ ಆ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದರಿಂದ ಪ್ರಜ್ವಲ್ ಅವರನ್ನ ಅರೆಸ್ಟ್ ಮಾಡಲಾಯಿತು. ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ಅವರನ್ನು ಉಚ್ಛಾಟನೆ ಮಾಡಲಾಯಿತು. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 47 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಆರೋಪವಿತ್ತು. ಈ ಕುರಿತು ಆ ಸಂತ್ರಸ್ತ ಮಹಿಳೆಯು ಕಳೆದ ವರ್ಷ ಏಪ್ರಿಲ್ನಲ್ಲಿ ಹಾಸನದ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದರು. ಈ ಪ್ರಕರಣವನ್ನು ವಿಚಾರಣೆ ನಡೆಸಿರುವ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಅಲ್ಲದೇ ಇನ್ನೂ ಮೂರು ಪ್ರಕರಣಗಳಲ್ಲಿ ತೀರ್ಪು ಬಾಕಿ ಇದೆ.


Leave a reply